COVID 19: ಕೊರೊನಾ ಲಕ್ಷಣ ಕಂಡಲ್ಲಿ ವಿದ್ಯಾರ್ಥಿಗಳು ಮನೆಗೆ! ಶಿಕ್ಷಕರು, ಪೋಷಕರಿಗೆ ಸಿಎಂ ಮಹತ್ವದ ಸೂಚನೆ

ರಾಜ್ಯದಲ್ಲಿ ದಿನೇ ದಿನೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳ. ಕೊರೊನಾ ಲಕ್ಷಣ ಕಂಡಲ್ಲಿ ವಿದ್ಯಾರ್ಥಿಗಳು ಮನೆಗೆ! ಹೌದು, ರಾಜ್ಯದಲ್ಲಿ ಕೋವಿಡ್ 19 (COVID 19) ಪ್ರಕರಣಗಳು ಹೆಚ್ಚಳ ಹಿನ್ನೆಲೆ ಶಾಲಾ ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಸಂದೇಶವನ್ನು ನೀಡಿದ್ದಾರೆ. ಸೋಂಕಿನ ಲಕ್ಷಣಗಳು ಇದ್ದರೆ ಮಕ್ಕಳನ್ನು ಶಾಲೆಗೆ ಕಳುಹಿಸುವುದು ಬೇಡ ಎಂದು ಪೋಷಕರಿಗೆ ತಿಳಿಸಿದ್ದು, ಅಂತಹ ಮಕ್ಕಳು ಶಾಲೆಗೆ ಬಂದಿದ್ದರೆ ವಾಪಸ್‌ ಕಳಿಸುವಂತೆ ಶಿಕ್ಷಕರಿಗೆ ಸೂಚಿಸಿದ್ದಾರೆ. ಶಾಲೆಗಳೂ ಈ ಬಗ್ಗೆ ಗಮನಹರಿಸಿ ಜ್ವರ, ಶೀತ, ನೆಗಡಿ ಇರುವ ಮಕ್ಕಳನ್ನು ಪೋಷಕರ ಮೂಲಕ ಮನೆಗೆ ಕಳುಹಿಸಬೇಕು ಎಂದು ಸಿಎಂ ತಿಳಿಸಿದ್ಧಾರೆ.

ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತೆ ಕಾಣಿಸಿಕೊಂಡಿದ್ದು, ಬೆಂಗಳೂರು ಸೇರಿದಂತೆ 6 ಜಿಲ್ಲೆಗಳಲ್ಲಿ ಹೆಚ್ಚು ಪ್ರಕರಣಗಳು ದೃಢಪಟ್ಟಿವೆ. ಈಗಾಗಲೇ ರಾಜ್ಯದಲ್ಲಿ 71 ಕೊರೊನಾ ಸೋಂಕು ದಾಖಲಾಗಿದೆ. ಕೋವಿಡ್ ಪ್ರಕರಣ ಸ್ಫೋಟವಾಗುತ್ತಿದ್ದಂತೆ ರಾಜ್ಯ ಸರ್ಕಾರ ಕೂಡ ಎಚ್ಚೆತ್ತುಕೊಳ್ಳುತ್ತಿದೆ. ಹೆಚ್ಚುತ್ತಿರುವ ಕೊರೊನಾ ಸೋಂಕು ಹಿನ್ನೆಲೆ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುರ್ತುಸಭೆ ನಡೆಸಿದ್ದಾರೆ. ಸಿಎಂ ನೀಡಿರುವ ಸೂಚನೆಗಳೇನು? ತಿಳಿಯೋಣ ಬನ್ನಿ.

covid cases in Karnataka

ಮೇ 29ರಿಂದ ಶಾಲೆಗಳು ಆರಂಭ ಆಗುವುದು ಡೌಟ್!

ರಾಜ್ಯದಲ್ಲಿ ಕೊರೊನಾ ಅಬ್ಬರ ಶುರುವಾಗಿದ್ದು, ಸದ್ಯ ಸಕ್ರಿಯ ಪ್ರಕರಣ ಸಂಖ್ಯೆ 47ಕ್ಕೆ ಏರಿಕೆಯಾಗಿದೆ. ಜೊತೆಗೆ ಇಬ್ಬರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಇನ್ನು ರಾಜ್ಯಾದ್ಯಂತ ಮೇ 29 ರಿಂದ ಶಾಲೆಗಳು ಪುನರಾರಂಭ ಆಗಬೇಕಿತ್ತು. ಆದರೆ, ಕೋವಿಡ್ 19 ಪ್ರಕರಣಗಳು ಮತ್ತೆ ವರದಿಯಾಗುತ್ತಿರುವುದರಿಂದ, ರಾಜ್ಯ ಸರ್ಕಾರವು 3 ಅಥವಾ 4 ದಿನಗಳ ನಂತರ ಪರಿಸ್ಥಿತಿಯನ್ನು ಪರಿಶೀಲಿಸಿ ಶಾಲೆಗಳು ಮತ್ತು ಕಾಲೇಜುಗಳನ್ನು ಪುನಃ ತೆರೆಯುವ ಬಗ್ಗೆ ನಿರ್ಧರಿಸಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಕೋವಿಡ್ ಭಯ ಬೇಡ... ಆದರೆ, ಎಚ್ಚರವಿರಲಿ ಎಂದ ICMR

ಕೊರೊನಾ ಹೊಸ ರೂಪಾಂತರದ ಬಗ್ಗೆ ಜನರು ಭಯಭೀತರಾಗಬೇಡಿ, ಆದರೆ ಕಡ್ಡಾಯವಾಗಿ ಮುನ್ನೆಚ್ಚರಿಕೆ ವಹಿಸಿ ಎಂದು ICMR ಸೂಚಿಸಿದೆ. ಈಗಾಗಲೇ, ಸರ್ಕಾರಿ ಇಲಾಖೆಗಳು ಪರಿಸ್ಥಿತಿಯನ್ನು ಗಮನಿಸುತ್ತಿವೆ ಎಂದು ICMR ನಿರ್ದೇಶಕ ಡಾ. ರಾಜೀವ್ ಬಹಲ್ ತಿಳಿಸಿದ್ದಾರೆ. ಕಡಿಮೆ ರೋಗನಿರೋಧಕ ಶಕ್ತಿ ಹೊಂದಿರುವವರು ಹಾಗೂ ದೀರ್ಘಕಾಲದ ಕಾಯಿಲೆ ಇರುವವರು ಮಾಸ್ಕ್ ಧರಿಸುವುದು ಸೇರಿದಂತೆ ಸೋಂಕು ತಡೆಯಲು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಅನುಸರಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.

Take a Poll

ಸಿಎಂ ನೀಡಿದ ಸೂಚನೆಗಳೇನು?

* ಸದ್ಯಕ್ಕೆ ಕೊರೊನಾ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಆದರೆ, ಮುಂಚಿತವಾಗಿಯೇ ಮುಂದೆ ಸಂಭವಿಸಬಹುದಾದ ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯವಾದ ಎಲ್ಲಾ ಸವಲತ್ತು, ಸಲಕರಣೆಗಳನ್ನು ಸಜ್ಜುಗೊಳಿಸಿಟ್ಟುಕೊಳ್ಳಬೇಕು.

* ಎಂತಹುದೇ ಪರಿಸ್ಥಿತಿ ಎದುರಿಸಲು ಸರ್ವ ಸನ್ನದ್ಧವಾಗಿರಬೇಕು. ವೆಂಟಿಲೇಟರ್, ಆಕ್ಸಿಜನ್, ಔಷಧ ಸೇರಿ ಇತ್ಯಾದಿ ಅಗತ್ಯಗಳನ್ನು ಸಿದ್ಧಪಡಿಸಿಟ್ಟುಕೊಳ್ಳಬೇಕು.

* ವಯಸ್ಸಾದವರು, ಗರ್ಭಿಣಿಯರು, ಹೃದಯ ಸಂಬಂಧಿ, ಶ್ವಾಸಕೋಶ ಸಮಸ್ಯೆ ಇರುವವರು ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವುದು ಒಳ್ಳೆಯದು. ಈ ಬಗ್ಗೆ ಅರಿವು ಮೂಡಿಸಬೇಕು.

* ಪ್ರತೀ ವಾರ ಅಥವಾ ಅಗತ್ಯ ಬಿದ್ದರೆ ಮೂರು ದಿನಕ್ಕೊಮ್ಮೆ ಪರಿಸ್ಥಿತಿಯ ಪರಿಶೀಲನೆ ನಡೆಸುತ್ತಾ ತೀವ್ರ ನಿಗಾ ಇಡಬೇಕು.

* ಗರ್ಭಿಣಿಯರಲ್ಲಿ ಆರೋಗ್ಯ ಸಮಸ್ಯೆ ಕಂಡುಬಂದರೆ ಅವರನ್ನು ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ವರ್ಗಾಯಿಸುವುದನ್ನು ನಿಲ್ಲಿಸಿ, ಎಲ್ಲಾ ಆಸ್ಪತ್ರೆಗಳಲ್ಲೂ ಅಗತ್ಯ ವ್ಯವಸ್ಥೆ ಮಾಡಿಕೊಂಡಿರಬೇಕು.

* ಶೀತ, ನೆಗಡಿ, ಜ್ವರ ಇರುವ ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸದಿರುವುದು ಉತ್ತಮ. ಶಾಲೆಗಳೂ ಈ ಬಗ್ಗೆ ಗಮನ ಹರಿಸಿ ಶೀತ, ನೆಗಡಿ ಇರುವ ಮಕ್ಕಳನ್ನು ವಾಪಾಸ್ ಪೋಷಕರ ಮೂಲಕ ಮನೆಗೆ ಕಳುಹಿಸಬೇಕು.

* ಕಳೆದ ಜನವರಿಯಿಂದಲೂ ಕೊರೊನಾ ಪ್ರಕರಣಗಳು ಅಲ್ಲಲ್ಲಿ ಒಂದು ಅಥವಾ ಎರಡು ಕಂಡುಬರುತ್ತಿದೆ. ಮೇ ತಿಂಗಳಲ್ಲಿ ಉಲ್ಬಣವಾಗಿದ್ದು ಮೇ ತಿಂಗಳ ನಾಲ್ಕನೇ ವಾರಕ್ಕೆ 62 ಪ್ರಕರಣಗಳು ವರದಿಯಾಗಿವೆ. ಆದರೆ, ಗಂಭೀರ ಎನ್ನುವಂತಹ ಪ್ರಕರಣಗಳ ಸಂಖ್ಯೆ ಒಂದು ಮಾತ್ರ ಇದೆ.

* ಎಸ್‌ಎಆರ್‌ಐ ಪ್ರಕರಣಗಳಲ್ಲಿ ತಪಾಸಣೆ ಕಾರ್ಯ ಈಗಾಗಲೇ ನಡೆಯುತ್ತಿದೆ. ನೆರೆಯ ರಾಜ್ಯಗಳಾದ ಕೇರಳದಲ್ಲಿ 95, ತಮಿಳು ನಾಡಿನಲ್ಲಿ 66, ಮಹಾರಾಷ್ಟ್ರ ಗಳಲ್ಲಿ 56 ಪ್ರಕರಣಗಳು ವರದಿಯಾಗಿವೆ.

* ರಾಜ್ಯದಲ್ಲಿ ಕೊರೊನಾ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಬಾಣಂತಿ ಹಾಗೂ ಮಕ್ಕಳ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು.

* ಮುಂದಿನ ದಿನಗಳಲ್ಲಿ ಅವಶ್ಯಕತೆ ಕಂಡು ಬಂದರೆ ವಿಮಾನ ನಿಲ್ದಾಣಗಳಲ್ಲಿ ಹೊರಗಡೆಯಿಂದ ಬರುವ ಪ್ರಯಾಣಿಕರಿಗೆ ತಪಾಸಣಾ ಘಟಕಗಳನ್ನು ಪ್ರಾರಂಭಿಸಬೇಕು.

* ಕೊರೊನಾ ವಿಷಯದಲ್ಲಿ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಧೋರಣೆ ಅನುಸರಿಸಬಾರದು. ಎಲ್ಲಾ ಜಿಲ್ಲೆಗಳಲ್ಲೂ ಜಿಲ್ಲಾ ಆಸ್ಪತ್ರೆಗಳೂ ಸರ್ವ ಸನ್ನದ್ಧವಾಗಿ ಇರಬೇಕು.

* ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೊರೊನಾ ಸಹಾಯವಾಣಿ ಪ್ರಾರಂಭಿಸಬೇಕು. ಆರೋಗ್ಯ ಇಲಾಖೆ ಸಿಬ್ಬಂದಿ ರಜಾ ಹಾಕಿ ತೆರಳದೆ ಕೇಂದ್ರ ಸ್ಥಾನದಲ್ಲಿಯೇ ಇದ್ದು ಕಾರ್ಯ ನಿರ್ವಹಿಸಬೇಕು.

* ರೂಪಾಂತರಿ ಕೊರೊನಾ ವೈರಾಣುವಿಗೆ ಸಂಬಂಧಿಸಿದಂತೆ ರೋಗ ನಿಯಂತ್ರಣಕ್ಕೆ ಮುನ್ನೆಚ್ಚರಿಕೆಯಾಗಿ ವ್ಯಾಕ್ಸಿನ್ ಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು. ಸಾಮಾಜಿಕ ಮಾಧ್ಯಮಗಳ ಮೂಲಕ ಕಾಲ ಕಾಲಕ್ಕೆ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು.

ದೇಶದಲ್ಲಿ 1000ಕ್ಕೂ ಹೆಚ್ಚು ಕೋವಿಡ್ ಪ್ರಕರಣ ಪತ್ತೆ!

ಭಾರತದಲ್ಲಿ ಸಕ್ರಿಯ ಕೋವಿಡ್ 19 ಪ್ರಕರಣಗಳ ಸಂಖ್ಯೆ ಏರಿಕೆಯಾಗಿದ್ದು, 1000 ಮೀರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಇತ್ತೀಚೆಗೆ 752 ಪ್ರಕರಣಗಳು ದೃಢಪಟ್ಟಿವೆ. ಈವರೆಗೂ ದೇಶಾದ್ಯಂತ ಒಟ್ಟು 4,45,11,545 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಕೇರಳ 430 ಕೋವಿಡ್ ಸಕ್ರಿಯ ಪ್ರಕರಣಗಳೊಂದಿಗೆ ಮುಂಚೂಣಿಯಲ್ಲಿದೆ. ನಂತರದ ಸ್ಥಾನಗಳಲ್ಲಿ ಮಹಾರಾಷ್ಟ್ರ, ದೆಹಲಿ ಮತ್ತು ಕರ್ನಾಟಕ ಇವೆ. ಇನ್ನೂ ರಾಜ್ಯದಲ್ಲೂ ಕೋವಿಡ್ ಪ್ರಕರಣಗಳು ಏರಿಕೆಯಾಗಿವೆ.

ಮುನ್ನೆಚ್ಚರಿಕೆ ಕ್ರಮಗಳೇನು?

ಜನಸಂದಣಿ ಇರುವ ಕಡೆಗಳಲ್ಲಿ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು. ಇದರಿಂದ ಕೇವಲ ಕೋವಿಡ್-19 ಸೋಂಕು ಮಾತ್ರವಲ್ಲದೆ ಇತರೆ ಸೋಂಕಿಗೆ ಸಂಬಂಧಿಸಿದ ಕಾಯಿಲೆಗಳು ಬಾರದಂತೆ ನಿಯಂತ್ರಿಸಲು ಸಾಧ್ಯವಾಗಲಿದೆ. ಇದಲ್ಲದೇ ಪರಸ್ಪರ ಅಂತರ ಕಾಯ್ದುಕೊಳ್ಳುವುದು, ಸ್ವಚ್ಛತೆ ಕಾಪಾಡಿಕೊಳ್ಳುವುದು ಮತ್ತು ಹಸ್ತಲಾಘವ ಮಾಡುವುದನ್ನು ನಿಲ್ಲಿಸುವ ಮೂಲಕ ಎಚ್ಚರ ವಹಿಸಬೇಕು ಎಂದು ಸೂಚಿಸಲಾಗಿದೆ.

ಇವು ಕೊರೊನಾ ಸೋಂಕಿನ​ ಲಕ್ಷಣಗಳು

ಕೊರೊನಾ ಸೋಂಕಿನ ಹೊಸ ರೂಪಾಂತರಗಳಿಂದ ಸೋಂಕಿಗೆ ಒಳಗಾದವರಲ್ಲಿ ಈ ಲಕ್ಷಣಗಳು ಕಂಡುಬರುತ್ತವೆ. ಜ್ವರ, ಆಲಸ್ಯ, ಆಯಾಸ, ಶೀತ, ಕೆಮ್ಮು, ತಲೆನೋವು ಮತ್ತು ಮೂಗು ಸೋರುವಿಕೆ ಇತ್ಯಾದಿ ಲಕ್ಷಣಗಳು ಕಂಡು ಬರುತ್ತವೆ. ಮಕ್ಕಳು ಮತ್ತು ವೃದ್ಧರಲ್ಲಿ ಈ ಎರಡು ಅಥವಾ ಮೂರು ಲಕ್ಷಣಗಳು ಕಂಡು ಬಂದರೆ ತಕ್ಷಣ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳುವುದು ಉತ್ತಮ. ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವಾಗ ಮಾಸ್ಕ್ ಧರಿಸುವುದು ಒಳ್ಳೆಯದು. ಬೆಚ್ಚಗಿನ ನೀರು ಕುಡಿಯುವುದು ನಿಮ್ಮ ಆರೋಗ್ಯಕ್ಕೆ ಉತ್ತಮ. ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ಸೀಮಿತವಾಗಿದ್ದರೂ, ಈ ಸೋಂಕನ್ನು ನಿರ್ಲಕ್ಷಿಸುವುದು ಸೂಕ್ತವಲ್ಲ.

ಒಂದು ವಾರ ಕ್ವಾರಂಟೈನ್‌ನಲ್ಲಿ ಇರಬೇಕು!

ಒಂದುವೇಳೆ ನಿಮಗೆ ಕೊರೊನಾ ಸೋಂಕು ಇರುವುದು ಪತ್ತೆಯಾದರೆ, ತಕ್ಷಣ ಈ ಕೆಲಸ ಮಾಡಬೇಕು. ನೀವು ಒಂದು ವಾರಗಳ ಕಾಲ ಕ್ವಾರಂಟೈನ್‌ನಲ್ಲಿ ಇರಬೇಕು. ಆಗಾಗ್ಗೆ ಕೈ ತೊಳೆಯುವ ಮೂಲಕ ಈ ಸೋಂಕಿನಿಂದ ಸ್ವಲ್ಪ ಮಟ್ಟಿಗೆ ಹೊರಬರಬಹುದು. ಮುಖ್ಯವಾಗಿ 60 ವರ್ಷಕ್ಕಿಂತ ಮೇಲ್ಪಟ್ಟವರು ಕೋವಿಡ್ 19 ಸೋಂಕಿಗೆ ಒಳಗಾಗದಂತೆ ಹೆಚ್ಚು ಎಚ್ಚರಿಕೆ ವಹಿಸಬೇಕಿದೆ. ಇನ್ನು ಮದುವೆ ಮತ್ತು ಇತರೆ ಸಾಮೂಹಿಕ ಕಾರ್ಯಕ್ರಮಗಳಿಗೆ ಹೋಗುವುದನ್ನು ನಿಲ್ಲಿಸಬೇಕು. ಈ ಹಿಂದೆ ಕೋವಿಡ್ ಲಸಿಕೆ ಪಡೆದಿರುವವರು ಈ ಸೋಂಕಿಗೆ ಒಳಗಾಗುವ ಸಾಧ್ಯತೆ ಕಡಿಮೆ ಇರುತ್ತದೆ. ಇತರೆ ರಾಜ್ಯಗಳಿಗೆ ಪ್ರಯಾಣಿಸುವವರು ತಮ್ಮ ಪ್ರವಾಸಗಳನ್ನು ಸ್ವಲ್ಪ ದಿನಗಳವರೆಗೆ ಮುಂದೂಡುವುದು ಉತ್ತಮ. ಇದರಿಂದ ಕೊರೊನಾ ಸೋಂಕಿನ ಅಪಾಯವನ್ನು ಕಡಿಮೆ ಮಾಡಬಹುದು.

Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.

English summary

COVID-19 cases increase in Karnataka: CM Siddaramaiah important instruction to teachers and parents

covid cases increase in Karnataka: CM Siddaramaiah important instruction to teachers and parents
Story first published: Tuesday, May 27, 2025, 9:30 [IST]
X
Desktop Bottom Promotion